SUDDIKSHANA KANNADA NEWS/DAVANAGERE/DATE:06_12_2025
ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಫಾರಸ್ಸು ಮಾಡಬೇಕು. ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ.
ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
READ ALSO THIS STORY: “ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಕೇಸ್: ನಾಯಿ ಮಾಲೀಕರ ಪತ್ತೆ ಹಚ್ಚಿ ಎಫ್ಐಆರ್ ದಾಖಲಿಸಿ”
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.





Leave a comment