SUDDIKSHANA KANNADA NEWS/ DAVANAGERE/ DATE:31-03-2025
ಬೆಂಗಳೂರು: ರಾಜ್ಯದ ಜನರಿಗೆ ಬೆಲೆ ಏರಿಕೆ ಬಿಸಿ ಭಾಗ್ಯವನ್ನು ಕಾಂಗ್ರೆಸ್ ಸರ್ಕಾರ ಕರುಣಿಸಿದೆ. ಹಾಲಿನ ದರ, ಟೋಲ್, ಕಸ ತ್ಯಾಜ್ಯ ಸಂಗ್ರಹ, ಬಸ್ ದರ ಸೇರಿದಂತೆ ಹಲವು ದರಗಳ ಏರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ.
ಇದು ರಾಜ್ಯದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂದಿನಿ ಹಾಲಿನ ದರ ಲೀಟರ್ ಗೆ 4 ರೂಪಾಯಿ ಹೆಚ್ಚಳವಾಗುತ್ತದೆ. ಬೆಳಿಗ್ಗೆ ಹಾಲಿನ ದರ ಹೆಚ್ಚಾಗಿದ್ದು ಅಧಿಕೃತವಾಗಿ ಜಾರಿಗೆ ಬರಲಿದೆ. ಹಾಲಿನ ದರ ಹೆಚ್ಚಳ ಬೆನ್ನಲ್ಲೇ ಕಾಫಿ, ಟೀ ದರವೂ ಹೆಚ್ಚಾಗುವ ಸಾಧ್ಯತೆ ನಿಚ್ಚಳವಾಗಿದೆ.
ಇನ್ನು ಬೆಲೆ ಏರಿಕೆ ವಿರುದ್ಧ ಬಿಜೆಪಿ ಬೀದಿಗಿಳಿಯಲು ಸಜ್ಜಾಗಿದೆ. ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಏಪ್ರಿಲ್ 2 ರಿಂದ ಹಂತ ಹಂತವಾಗಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ.
ರಾಜ್ಯದ ಜನತೆಯ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿ ಪ್ರತಿಭಟನೆಯ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷ ಬಿ. ಎ. ಬಸವರಾಜ್, ಮಾಜಿ ಸಚಿವ ಬಿ. ಶ್ರೀರಾಮುಲು, ಶಾಸಕ ಮುನಿರತ್ನ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದಎಸ್. ಆರ್. ವಿಶ್ವನಾಥ್, ಕೃಷ್ಣಪ್ಪ, ಬಸವರಾಜ ಮತ್ತೀಮಡು, ಜಿಲ್ಲಾಧ್ಯಕ್ಷ ಸಿ. ಕೆ. ರಾಮಮೂರ್ತಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ. ಎಸ್. ಪಾಟೀಲ್ ನಡಹಳ್ಳಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.