Home ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಅಂತ್ಯಕ್ರಿಯೆ ಮುಗಿಸಿ ಹಿಂತಿರುಗುತ್ತಿದ್ದ ಒಂದೇ ಕುಟುಂಬದ 9 ಜನ ಮಸಣಕ್ಕೆ!
Home

ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಅಂತ್ಯಕ್ರಿಯೆ ಮುಗಿಸಿ ಹಿಂತಿರುಗುತ್ತಿದ್ದ ಒಂದೇ ಕುಟುಂಬದ 9 ಜನ ಮಸಣಕ್ಕೆ!

Share
ಅಪಘಾತ
Share

ಫಿರೋಜ್‌ಪುರ (ಪಂಜಾಬ್): ಪಂಜಾಬ್‌ನ ಫಿರೋಜ್‌ಪುರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. 28 ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ಟ್ರಕ್ ಮತ್ತು ಟ್ರೈಲರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ಅಂತ್ಯಕ್ರಿಯೆ ಮುಗಿಸಿ ಬರುವಾಗ ಕಾಯುತ್ತಿದ್ದ ಯಮ!

ಮೂಲಗಳ ಪ್ರಕಾರ, ಮೃತರನ್ನು ಜಲಾಲಾಬಾದ್ ಮೂಲದ ಒಂದೇ ಕುಟುಂಬದ ಸದಸ್ಯರು ಮತ್ತು ಅವರ ಆಪ್ತ ಸಂಬಂಧಿಕರು ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಮಹಿಳೆಯೊಬ್ಬರ ಅಂತ್ಯಕ್ರಿಯೆಯ ನಂತರದ ವಿಧಿವಿಧಾನಗಳನ್ನು ಮುಗಿಸಿ ಟ್ರಕ್‌ನಲ್ಲಿ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಫಿರೋಜ್‌ಪುರ-ಫಾಜಿಲ್ಕಾ ರಸ್ತೆಯಲ್ಲಿ ಈ ಘೋರ ದುರಂತ ಸಂಭವಿಸಿದೆ.

ಢಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಮೂವರು ಪುರುಷರು ಮತ್ತು ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಹಾಗೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಸ್ಥಳೀಯರ ಆಕ್ರೋಶ, ತನಿಖೆ ಚುರುಕು:

ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಹಿರಿಯ ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಫರಿದ್‌ಕೋಟ್‌ನ ವಿಶೇಷ ವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡಿರುವ ಸ್ಥಳೀಯ ನಿವಾಸಿಗಳು, ಫಿರೋಜ್‌ಪುರ-ಫಾಜಿಲ್ಕಾ ಹೆದ್ದಾರಿಯ ಈ ನಿರ್ದಿಷ್ಟ ವಲಯವು ‘ಅಪಘಾತದ ಬ್ಲಾಕ್‌ಸ್ಪಾಟ್’ (Accident Blackspot) ಆಗಿ ಮಾರ್ಪಟ್ಟಿದೆ. ಕಳೆದ ಕೆಲವು ವರ್ಷಗಳಲ್ಲಿ ಇಲ್ಲಿ ಹತ್ತಾರು ಪ್ರಾಣಹಾನಿಗಳು ಸಂಭವಿಸಿವೆ. ಸರ್ಕಾರ ತಕ್ಷಣವೇ ಈ ಕಿರಿದಾದ ಹೆದ್ದಾರಿಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *