
ನ್ಯೂಯಾರ್ಕ್ / ನವದೆಹಲಿ: ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತವು ಗಂಭೀರ ಸ್ವರೂಪದ “ಆರ್ಥಿಕ ವಿಪತ್ತು” ಎದುರಿಸುತ್ತಿದೆ ಎಂದು ಆರೋಪಿಸಿರುವ ಅವರು, ನಿರುದ್ಯೋಗ ಸಮಸ್ಯೆ ಹಾಗೂ ಶಿಕ್ಷಣ ಕ್ಷೇತ್ರದ ವೈಫಲ್ಯವನ್ನು ಕಟುವಾಗಿ ಟೀಕಿಸಿದ್ದಾರೆ.
ಕಳೆದ ಒಂದು ದಶಕದಿಂದ ಭಾರತದ ಆರ್ಥಿಕ ಮಾದರಿಯು ನಿರೀಕ್ಷಿತ ಫಲಿತಾಂಶ ನೀಡುವಲ್ಲಿ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ಅವರ ಈ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದು, ವಿದೇಶಿ ನೆಲದಲ್ಲಿ ಭಾರತದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ತೀವ್ರವಾಗಿ ಆಕ್ರೋಷ ವ್ಯಕ್ತಪಡಿಸಿದೆ.
ಉದ್ಯೋಗ ಸೃಷ್ಟಿಯಲ್ಲಿ ವಿಫಲ: ‘ಮೇಕ್ ಇನ್ ಇಂಡಿಯಾ’ ಮತ್ತು ‘ಸ್ಟಾರ್ಟ್-ಅಪ್ ಇಂಡಿಯಾ’ದಂತಹ ಸರ್ಕಾರದ ಪ್ರಮುಖ ಯೋಜನೆಗಳು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ವಿಫಲವಾಗಿವೆ ಎಂದು ರಾಹುಲ್ ಆರೋಪಿಸಿದ್ದಾರೆ.
ತಯಾರಿಕಾ ಕ್ಷೇತ್ರಕ್ಕೆ ಒತ್ತು: ಕೇವಲ ಸೇವಾ ವಲಯದಿಂದ ಮಾತ್ರ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ಉತ್ಪಾದನಾ ಕ್ಷೇತ್ರವನ್ನು ಮರುನಿರ್ಮಾಣ ಮಾಡುವುದು ಅನಿವಾರ್ಯ ಎಂದಿದ್ದಾರೆ.
ಉದ್ಯಮಿಗಳ ಬೆಳವಣಿಗೆ: ದೇಶದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಂಕಷ್ಟದಲ್ಲಿರುವಾಗ, ಕೆಲವೇ ಕೆಲವು ಉದ್ಯಮಿಗಳಾದ ಅದಾನಿ ಮತ್ತು ಅಂಬಾನಿ ಮಾತ್ರ ವೇಗವಾಗಿ ಬೆಳೆಯುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಚುನಾವಣಾ ವೆಚ್ಚದ ಕುರಿತು ಅನುಮಾನ: ಇತ್ತೀಚಿನ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡಲಾಗಿದ್ದು, ಐದು ಲಕ್ಷ ಮತಗಳ ಗೆಲುವಿನ ಅಂತರವು ಅಸಾಧ್ಯವಾದದ್ದು ಎಂದು ಚುನಾವಣಾ ಪದ್ಧತಿಯ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.
ಭಾರತದ ಆರ್ಥಿಕತೆಯ ಬೆನ್ನೆಲುಬಾಗಿದ್ದ ಕೃಷಿ ಮತ್ತು ಸಣ್ಣ ವ್ಯಾಪಾರಗಳು ಇಂದು ಹಾನಿಗೊಳಗಾಗಿವೆ ಎಂದು ಆತಂಕ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಬಿಜೆಪಿ ತಳ್ಳಿಹಾಕಿದ್ದು, ದೇಶದ ವರ್ಚಸ್ಸಿಗೆ ಧಕ್ಕೆ ತರುವ ನಿರಂತರ ಪ್ರಯತ್ನವಿದು ಎಂದು ತಿರುಗೇಟು ನೀಡಿದೆ.




