SUDDIKSHANA KANNADA NEWS/ DAVANAGERE/ DATE:22-11-2024
ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯು ಸುಸೂತ್ರವಾಗಿ ನಡೆದಿದ್ದು, ಶೇ.76.02 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯವು ನ.23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ರಾಜೇಶ್ ಹೆಚ್.ಡಿ ಅವರು ಹೇಳಿದರು.
ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಗುರುವಾರ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ನ.23 ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆೆ. ಇದಕ್ಕೂ ಮುನ್ನ 07 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಎಣಿಕೆ ಮತ್ತು ಇಟಿಪಿಬಿಎಸ್-04 ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು 14+1 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸವರ್ಸ್ಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕಾ ಕಾರ್ಯಕ್ಕೆ 19 ಎಣಿಕಾ ಮೇಲ್ವಿಚಾರಕರು, 21 ಎಣಿಕಾ ಸಹಾಯಕರು ಮತ್ತು 20 ಎಣಿಕಾ ಮೈಕ್ರೋ ಅಬ್ಸವರ್ಸ್ಗಳನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.
ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ
ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.
ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ಅಧಿಕಾರಿ, ಸಿಬ್ಬಂದಿ ನಿಯೋಜನೆ:
ಮತ ಎಣಿಕೆ ಕೇಂದ್ರವಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಸಿಆರ್ಪಿಎಫ್, ಸಿಎಎಸ್ಎಫ್, ಕೆಎಸ್ಆರ್ಪಿ ಮತ್ತು ಸಿವಿಲ್ ಪೊಲೀಸ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ರಾಜೇಶ್.ಹೆಚ್.ಡಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.