ಕಲಬುರಗಿ: ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಗೃಹ ಸಚಿವ ಹಾಗೂ ಉಪಪ್ರಧಾನಿಯಾಗಿದ್ದ ಅಡ್ವಾಣಿ ಯವರು 371ಜೆ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇದನ್ನು ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಸಿಂಗ್ ಹೋರಾಟದಿಂದ ಇದು ಸಾಧ್ಯವಾಯಿತು. ಇದರಿಂದಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ₹13,000 ಕೋಟಿ ಗಳನ್ನು ಮೂರು ವರ್ಷಗಳಲ್ಲಿ ಒದಗಿಸಲಾಗಿದ್ದು, ಈ ವರ್ಷದಲ್ಲಿ 3,000 ಕೋಟಿ ಒದಗಿಸಲಾಗಿದೆ ಎಂದು ತಿಳಿಸಿದರು.
ಕೆಕೆಆರ್‌ಡಿಬಿ ಅನುದಾನವನ್ನು ಪೂರ್ಣವಾಗಿ ವೆಚ್ಚ ಮಾಡಬೇಕು. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಅಜಯ್ ಸಿಂಗ್ ಅವರಿಗೆ ತಿಳಿಸಲಾಗಿತ್ತು. ಅದರಂತೆ 300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ. ರಾಜ್ಯದಲ್ಲಿ ಒಟ್ಟು 900 ರಾಜ್ಯಕ್ಕೆ ಕೆಪಿಎಸ್ ಮಂಜೂರಾಗಿದೆ ಎಂದು ಮಾಹಿತಿ ನೀಡಿದರು.
ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿಯನ್ನು ಆಧರಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ ಬಗ್ಗೆ ವರದಿ ಸಲ್ಲಿಸಲು ಗೋವಿಂದ ರಾವ್ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲಿ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.





Leave a comment