SUDDIKSHANA KANNADA NEWS/ DAVANAGERE/ DATE:24-03-2024
ದಾವಣಗೆರೆ: ಮುಂಬರುವ ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದು ಕೆಲವರು ಹುಚ್ಚರ ಮಾತಾಗಿದೆ. ರಾಜ್ಯದಲ್ಲಿ 5 ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುತ್ತದೆ. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರೂ ಆದ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯಲ್ಲಿ ಮಾರ್ಚ್ 26ರಂದು ನಡೆಯುವ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರು 28 ಕ್ಷೇತ್ರಗಳಲ್ಲಿ ಗೆಲ್ಲುವುದು ಅಸಾಧ್ಯದ ಮಾತು. ಕಾಂಗ್ರೆಸ್ ಪಕ್ಷವು 10 ರಿಂದ 12 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಸಂಬಂಧಿಕರೇ ಸ್ಪರ್ಧಾಳುಗಳಾಗಿದ್ದರೂ, ಸಂಬಂಧವೇ ಬೇರೆ, ಚುನಾವಣೆಯೇ ಬೇರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರು ಕಳೆದ ಐದು ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಜನರು ನಮಗಿಂತ ಹೆಚ್ಚು ಅವರನ್ನೇ ಹುಡುಕಿಕೊಂಡು ಬರುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲಿಯೂ ಲಂಚದ ಹಾವಳಿ ಹೆಚ್ಚಾಗಿದೆ. ಲಂಚ ಹೊಡೆಯೋದು ಕಡಿಮೆಯಾದರೆ ಮತ್ತೆ ಅಧಿಕಾರ ಸಿಗುತ್ತದೆ. ಕಾಂಗ್ರೆಸ್ ನಲ್ಲಿ ಲಂಚ ಕಡಿಮೆ. ಬಿಜೆಯಲ್ಲಿ ಲಂಚ ಹೆಚ್ಚಾಗಿರುತ್ತದೆ. ಹಾಗಾಗಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಆನಂದಪ್ಪ, ಸುರಭಿ ಶಿವಮೂರ್ತಿ, ಕುರುಡಿಗಿರಿ ಸ್ವಾಮಿ, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಜಿ. ಪಿ. ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮತ್ತಿತರರು ಹಾಜರಿದ್ದರು.