SUDDIKSHANA KANNADA NEWS/ DAVANAGERE/ DATE:22-03-2025
ಬೆಂಗಳೂರು: ವಿಧಾನಸಭಾ ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವ ಕುರಿತ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಾತ್ಮಕ, ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.
ಸ್ಪೀಕರ್ ಅವರು ಶಾಸಕರು ಮಾತ್ರವಲ್ಲ ಕ್ಷೇತ್ರದ ಜನರಿಗೆ ಅವಮಾನ ಮಾಡಿದ್ದಾರೆ. ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಮೀಸಲಾತಿ ಕೊಟ್ಟ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುತ್ತದೆ. ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ನಡೆಸಿ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಎಚ್ಚರಿಸಿದ್ದಾರೆ.
ಹಿಂದೂಗಳಲ್ಲಿ ಬಡವರೇ ಇಲ್ಲವೇ, ನಮ್ಮ ಸಂವಿಧಾನದಲ್ಲಿ ಧರ್ಮ ಆಧರಿತ ಮೀಸಲಾತಿ ಕೊಡಲು ಅವಕಾಶವಿಲ್ಲ, ಇದರ ನಡುವೆ ಮೀಸಲಾತಿ, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ 20 ಲಕ್ಷ ಬದಲು 30 ಲಕ್ಷ ಕೊಡುವುದಾಗಿ ತಿಳಿಸುವುದು, ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರ ಆತ್ಮರಕ್ಷಣೆ ಕಲೆಗೆ ಸಂಬಂಧಿಸಿ ಬಜೆಟ್‍ನಲ್ಲಿ ಹಣ ಮೀಸಲಿಟ್ಟಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.