ದಾವಣಗೆರೆ: ತುಂಡು ತುಂಡಾಗಿ ಕತ್ತರಿಸಿ ಕಾಂಗ್ರೆಸ್ ನಾಯಕರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುತ್ತೇವೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ನೈತಿಕ ಹೊಣೆ ಹೊತ್ತು ವಿಪಕ್ಷ ಸ್ಥಾನಕ್ಕೆ ನಾರಾಯಣಸ್ವಾಮಿ ರಾಜೀನಾಮೆ ನೀಡಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಆಗ್ರಹಿಸಿದ್ದಾರೆ.
ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದಾತ್ಮಕ ಹಾಗೂ ನಿಂದನಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಮಾತನಾಡಿದ್ದರು. ಈಗ ಪ್ರಚೋದನೆ ಹಾಗೂ ಕೊಲೆ ಬೆದರಿಕೆ ಹಾಕುವ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವುದನ್ನು ಮರೆತು ರೌಡಿಗಳಂತೆ ಹೇಳಿಕೆ
ನೀಡಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಬಿಜೆಪಿಯದ್ದು ಮೊದಲಿನಿಂದಲೂ ಹೊಡಿ ಬಡಿ ಸಂಸ್ಕೃತಿ. ಇಂಥ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ ಅವರ ಮಾತುಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಮರ್ಥಿಸಿಕೊಳ್ಳುತ್ತಾರಾ? ಈ ರೀತಿ ಬೆದರಿಕೆ ಹಾಕುವ ನಾಯಕನಿಗೆ ವಿಪಕ್ಷದಂಥ ಉನ್ನತ ಸ್ಥಾನ ನೀಡಿರುವ ಬಿಜೆಪಿ ಹೈಕಮಾಂಡ್ ಗೆ ನಾಚಿಕೆಯಾಗಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗುವುದಿಲ್ಲ. ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತೇವೆಂಬ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.





Leave a comment