SUDDIKSHANA KANNADA NEWS/ DAVANAGERE/ DATE:21-08-2024
ಬೆಂಗಳೂರು: ರಾಜ್ಯದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಪಡೆಯಲು ಕಾರ್ಯಪಡೆಯೊಂದನ್ನು ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕಾನೂನು (ತಿದ್ದುಪಡಿ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿರುದ್ಧ ಅಗೌರವ ತೋರಿದರೆ, ಕೆಟ್ಟದಾಗಿ ಮಾತನಾಡಿದರೆ ಮತ್ತು ಹಿಂಸಾಚಾರ ನಡೆಸಿದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಇದು ಜಾಮೀನುರಹಿತ ಅಪರಾಧ. 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆಯನ್ನೂ ವಿಧಿಸಬಹುದು. ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡರೂ ಜಾಮೀನುರಹಿತ ಅಪರಾಧವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಆಕೆ ಹತ್ಯೆ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಹೇಳಿದ್ದಾರೆ.