ಮುಂಬೈ: ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ಗಂಭೀರ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಐಪಿಎಲ್ ಮಾಲೀಕರೊಬ್ಬರು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ.
ಇದರೊಂದಿಗೆ ರಾಹುಲ್ ದ್ರಾವಿಡ್ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳುವುದು ಖಚಿತವಾದಂತಾಗಿದೆ. ಇದಕ್ಕೂ ಮುನ್ನವೇ ಟೀಮ್ ಇಂಡಿಯಾದ ಕೋಚ್ ಆಗಿ ಭಾರತೀಯರೊಬ್ಬರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸುಳಿವು ನೀಡಿದ್ದರು. ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರನ್ನು ಕೋಚ್ ಆಗಿ ನೇಮಕ ಮಾಡಲು ಬಯಸಿದ್ದೇವೆ ಎಂದು ಜಯ್ ಶಾ ತಿಳಿಸಿದ್ದರು.