SUDDIKSHANA KANNADA NEWS/ DAVANAGERE/ DATE-06-06-2025
ದಾವಣಗೆರೆ: ನಗರದಲ್ಲಿ ಶಾಲಾ ಮಕ್ಕಳನ್ನು ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.
ಈ ಬಗ್ಗೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಮಂಜುನಾಥ ಹಾಗೂ ನಗರ ಪೊಲೀಸ್ ಉಪಾಧೀಕ್ಷಕಶರಣಬಸವೇಶ್ವರರ ಮಾರ್ಗದರ್ಶನದಲ್ಲಿ ದಾವಣಗೆರೆ ಸಂಚಾರ ವೃತ್ತ ಪೊಲೀಸ್ ನಿರೀಕ್ಷಕ ಮಂಜುನಾಥ ನಲವಾಗಲು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ದಕ್ಷಿಣ ಸಂಚಾರ ಮತ್ತು ಉತ್ತರ ಸಂಚಾರ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಿಶೇಷ ಕಾರ್ಯಚರಣೆ ನಡೆಸಿದ್ದು, ದಾವಣಗೆರೆ ನಗರದಲ್ಲಿ ಶಾಲಾ ಮಕ್ಕಳನ್ನು ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕರೆದುಕೊಂಡು ಹೋಗುತ್ತಿದ್ದ ಆಟೋಗಳನ್ನು ಹಿಡಿದು ಈ ಸಂಬಂಧ ಒಟ್ಟು 105 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 20600 ರೂ ಗಳು ದಂಡ ವಿಧಿಸಲಾಗಿದೆ.
ಇನ್ನೂ ಮುಂದೆ ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು. ನಿಯಮ ಮೀರಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಸಂಚಾರ ನಿಯಮಗಳನ್ನು ಪಾಲಿಸಲು ಜಾಗೃತಿ ಮೂಡಿಸಲಾಗಿದೆ.
ಆಟೋ ಚಾಲಕರು, ಇತರೆ ವಾಹನಗಳ ಮಾಲೀಕರಿಗೆ ಸೂಚನೆ:
ದಾವಣಗೆರೆ ನಗರ ಹಾಗೂ ಜಿಲ್ಲೆಯಾದ್ಯಂತ ಶಾಲಾ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋಚಾಲಕರು ಹಾಗೂ ಇತರೆ ವಾಹನಗಳಿಗೆ ಸೂಚಿಸುವುದೇನೆಂದರೆ ತಮ್ಮ ವಾಹನಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು. ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು. ಒಂದು ವೇಳೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವುದು ಕಂಡುಬಂದಲ್ಲಿ ಹಾಗೂ ನಿಯಮ ಮೀರಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ.