SUDDIKSHANA KANNADA NEWS/ DAVANAGERE/ DATE:07-02-2025
ದಾವಣಗೆರೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧದ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣರ ಅರ್ಜಿ ವಜಾಗೊಳಿಸಿರುವುದು ಸತ್ಯಕ್ಕೆ ಸಂದ ಜಯ ಎಂದು ಜವಾಹರ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸಿಬಿಐಗೆ ವಹಿಸಲು ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಈ ಮೂಲಕ ಈ ಪ್ರಕರಣದಲ್ಲಿ ಸಿದ್ದರಾಮಯ್ಯರ ಪಾತ್ರ ಇಲ್ಲ ಎಂಬುದು ಸ್ಪಷ್ಟವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ವಿನಾಕಾರಣ ಆರೋಪ ಮಾಡಿ ಜನರಲ್ಲಿ ತಪ್ಪು ಭಾವನೆ ಮೂಡಿಸಲು ಪ್ರಯತ್ನಿಸಿದರು. ಆದ್ರೆ, ಈಗ ಹೈಕೋರ್ಟ್ ನೀಡಿರುವ ತೀರ್ಪಿನಿಂದ ಬಿಜೆಪಿ – ಜೆಡಿಎಸ್ ಷಡ್ಯಂತ್ರ ಬಯಲಾಗಿದೆ ಎಂದು
ಹೇಳಿದ್ದಾರೆ.
ಹಿಂದುಳಿದ ವರ್ಗದ, ಅಹಿಂದ ಜನರ ಮನಮಾನಸದಲ್ಲಿ ಬೇರೂರಿರುವ ಸಿದ್ದರಾಮಯ್ಯರು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ. ಜನಪ್ರಿಯ ಆಡಳಿತ ನೀಡುತ್ತಿದ್ದಾರೆ. ಮಹಿಳೆಯರು, ಯುವಕರು ಸೇರಿದಂತೆ ಎಲ್ಲಾ ವರ್ಗದವರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಸಿದ್ದರಾಮಯ್ಯರ ಜನಪ್ರಿಯತೆ, ಸಮರ್ಥ ಆಡಳಿತ ಸಹಿಸದೇ ಬಿಜೆಪಿಗರು ಸುಳ್ಳು ಆರೋಪ ಮಾಡಿದ್ದಾರೆ ಎಂಬುದು ಹೈಕೋರ್ಟ್ ತೀರ್ಪಿನಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಕಲಿ ಚೆಕ್ ಸಹಿ ಸೇರಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಆದ್ರೆ, ಇದುವರೆಗೆ ಯಾಕೆ ಕ್ರಮ ಕೈಗೊಂಡಿಲ್ಲ. ಭ್ರಷ್ಟಾಚಾರದ ಆರೋಪವನ್ನು ಸ್ವಪಕ್ಷೀಯರೇ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯ ಭ್ರಷ್ಟಾಚಾರಕ್ಕೆ ಇದಕ್ಕಿಂತ ನಿದರ್ಶನ ಬೇಕಾ? ಎಂದು ಮೊಹಮ್ಮದ್ ಜಿಕ್ರಿಯಾ ಪ್ರಶ್ನಿಸಿದ್ದಾರೆ.