SUDDIKSHANA KANNADA NEWS/ DAVANAGERE/ DATE-05-05-2025
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
“ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ ಎಂದು ತಿಳಿಸಿದರು.
ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ
ಎಂದರು.
2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು ಎಂದು
ಮಾಹಿತಿ ನೀಡಿದರು.