SUDDIKSHANA KANNADA NEWS/ DAVANAGERE/ DATE:16-02-2024
ಬೆಂಗಳೂರು: ರಾಜ್ಯ ಸರ್ಕಾರದ 2024-25 ನೇ ಸಾಲಿನ ಬಜೆಟ್ನಲ್ಲಿ ಕಲಬುರಗಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗಿದೆ.
ಕರ್ನಾಟಕ ನೀರಾವರಿ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಕಲಬುರಗಿಯ ಯಡಳ್ಳಿ ಹಾಗೂ ತೆರ್ನಳ್ಳಿ, ಉಡುಪಿ ಜಿಲ್ಲೆಯ ಸ್ವರ್ಣ ಹಾಗೂ ಸಿದ್ದಾಪುರ, ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ-ಹಲಗಲಿ, ಸಸಾಲಟ್ಟಿ-ಶಿವಲಿಂಗೇಶ್ವರ, ಶಿರೂರು, ಹನವಾಳ, ಬೆಳಗಾವಿಯ ಜಿಲ್ಲೆಯ ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರಿ, ಶ್ರೀ ಚನ್ನವೃಷಭೇಂದ್ರ, ಮಹಾಲಕ್ಷ್ಮಿ, ಸತ್ತಿಗೇರಿ, ಮಾರ್ಕಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಳೆಯ ಏತ ನೀರಾವರಿ ಯೋಜನೆಗಳ ಪುನಶ್ವೇತನ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ರಾಯಚೂರು ಜಿಲ್ಲೆಯ ಗುಂಜಳ್ಳಿ, ಕಲಬುರಗಿ ಜಿಲ್ಲೆಯ ಆಳಂದ, ಬೀದರ್ ಜಿಲ್ಲೆಯ ಔರಾದ್, ಬೆಳಗಾವಿ ಜಿಲ್ಲೆಯ ಅರಬಾವಿ, ಹಿರೆಬಾಗೇವಾಡಿ, ಸಂತಿ ಬಸ್ತವಾಡ, ಕಾಗವಾಡ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಿರವತ್ತಿ, ಗದಗ ಜಿಲ್ಲೆಯ ಜಾಲವಾಡಗಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ 7,280 ಕೋಟಿ ರೂ. ಅಂದಾಜು ಮೊತ್ತದಲ್ಲಿ
ಅನುಷ್ಠಾನಗೊಳಿಸಲಾಗುವುದು. ಪ್ರಸ್ತಾಪಿತ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 97,698 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.
ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟಿ ರೂ. ಮೊತ್ತದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.
ರಾಯಚೂರು ಜಿಲ್ಲೆಯ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಬಿ.ಸಿ.ಬಿ ನಿರ್ಮಾಣ, ಮಾನ್ವಿ ತಾಲ್ಲೂಕಿನ ಕುರ್ಡಿ ಕೆರೆ ತುಂಬಿಸುವ ಯೋಜನೆ, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಏತ ನೀರಾವರಿ, ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದ ಬಳಿ ಏತ ನೀರಾವರಿ, ಚಿತ್ತಾಪುರ ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆ, ಸೊರಬ ತಾಲ್ಲೂಕಿನ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್, ಜೇವರ್ಗಿ ತಾಲ್ಲೂಕಿನಲ್ಲಿ ಬಾಂದಾರು ಹಾಗೂ ಕೆರೆ ತುಂಬಿಸುವ ಕಾಮಗಾರಿ ಮತ್ತು ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನಲ್ಲಿ ಕೆರೆ/ ಬ್ರಿಡ್ಜ್ ಕಂ ಬ್ಯಾರೇಜ್ ಯೋಜನೆಗಳನ್ನು 850 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪಿಸಲಾಗುವುದು
ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು.
ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು.
ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ ಸಿ.ಎನ್.ಸಿ (Computer Numerical Control ) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರವನ್ನು 16 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ಪ್ರಗತಿ ಪಥ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸಲಾಗುವುದು. ಈ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ಉದ್ದದ ರಸ್ತೆಗಳಂತೆ, ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲವನ್ನು 5,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.
ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರದ ಮಾನ್ಯತೆಯುಳ್ಳ ದಾಖಲೆಗಳನ್ನು ಡಿಜಿಲಾಕರ್ ಆಪ್ನಲ್ಲಿ ಸುರಕ್ಷಿತವಾಗಿರಿಸುವ ಸಲುವಾಗಿ ನನ್ನ ಗುರುತು ಅಭಿಯಾನವನ್ನು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 1,000 ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗುವುದು.
ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಲಿದೆ.
ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ಗಳನ್ನು ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್ಶಿಪ್ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸಟೈಲ್ ಪಾರ್ಕ್ನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
ಬೆಂಗಳೂರಿನಾಚೆಗೂ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗಾಗಿ ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಮತ್ತು ಕಿಯೋನಿಕ್ಸ್ ಸಹಯೋಗದೊಂದಿಗೆ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಸಂಗ್ರಹಾಲಯ/ವಚನ ಮಂಟಪವನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದು.
ತತ್ವಪದಕಾರರು ಮತ್ತು ಸೂಫಿಗಳ ಬದುಕು ಮತ್ತು ಸಂದೇಶಗಳ ಅಧ್ಯಯನ ಕೈಗೊಳ್ಳಲು ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಮತ್ತು ಶಿವಯೋಗಿ ಸಿದ್ಧರಾಮೇಶ್ವರರವರ ಬದುಕು-ಬರಹ ಕುರಿತು ಅಕ್ಕಮಹಾದೇವಿ ಮಹಿಳಾ ಶ್ವವಿದ್ಯಾಲಯದಲ್ಲಿ ಅಧ್ಯಯನ ಫೀಠಗಳನ್ನು ಸ್ಥಾಪಿಸಲಾಗುವುದು.
ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು Archaeological Survey of India (ASI)ಗೆ ಶಿಫಾರಸ್ಸು ಮಾಡಲಾಗುವುದು.