DDIKSHANA KANNADA NEWS/ DAVANAGERE/ DATE:18-02-2024U
ಮಂಡ್ಯ ( ಮಳವಳ್ಳಿ): ನಟ ರಾಕ್ಷಸ ಡಾಲಿ ಧನಂಜಯ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಕುರಿತಂತೆ ಚರ್ಚೆಯೂ ಆಗಿಲ್ಲ, ಇದರ ಬಗ್ಗೆ ನನಗೆ ಗೊತ್ತೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅವರು ಇಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಚಿತ್ರ ನಟ ಡಾಲಿ ಧನಂಜಯ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮ ಪಕ್ಷದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಇದರ ಬಗ್ಗೆ ನನಗೆ ಗೊತ್ತೂ ಇಲ್ಲ ಎಂದರು.
ಕಳೆದ ಬಾರಿ ಮೈತ್ರಿಯಿಂದ ಬಿಜೆಪಿ ಯನ್ನು ಎದುರಿಸಿದ್ದು ಈ ಬಾರಿ ಏಕಾಂಗಿಯಾಗಿ ಬಿಜೆಪಿಯನ್ನು ಎದುರಿಸುತ್ತಿರುವ ಬಗ್ಗೆ ಮಾತನಾಡಿ ಈಗ ಒಂದೇ ವಿರೋಧ ಪಕ್ಷವಿದೆ. ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಿದೆ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷ ವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿ ಯವರೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.
ಬಿಜೆಪಿಗೆ ಬಜೆಟ್ ಅರ್ಥವಾಗಿಲ್ಲ
ಬಿಜೆಪಿ ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಬಜೆಟ್ ಅರ್ಥವಾಗಿಲ್ಲ. ಬಡವರ ವಿರೋಧಿ ಬಿಜೆಪಿಗೆ ಬಜೆಟ್ ಅರ್ಥವಾಗೋಲ್ಲ. ಬಡವರ ಪರವಾಗಿ ನಾವು ಕಾರ್ಯಕ್ರಮಗಳನ್ನು ನೀಡಿರುವುದು ಟೀಕಿಸಿದರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು
ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.
ಕೇಂದ್ರದಿಂದ 1.87 ಲಕ್ಷ ಕೋಟಿ ರೂ.ಗಳು ನಮಗೆ ನಷ್ಟವಾಗಿದೆ. ಆ ಅನುದಾನ ಬಂದರೆ ಇನ್ನೂ ಹೆಚ್ಚು ಕಾರ್ಯಕ್ರಮಗಳನ್ನು ರಾಜ್ಯಕ್ಕೆ ಕೊಡಬಹುದು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.