SUDDIKSHANA KANNADA NEWS/ DAVANAGERE/ DATE:14-01-2025
ಬೆಂಗಳೂರು: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ರಾತ್ರಿ ನಡೆದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲರ ಶಾಸಕಾಂಗ ಪಕ್ಷದ ಸಭೆ ಮುಗಿಸಿಕೊಂಡು ಸೋಮವಾರ ರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನು, ಮುಖಕ್ಕೆ ಗಾಯಗಳಾಗಿದ್ದು, ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ.
ಕೂಡಲೇ ಇಬ್ಬರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಆರೋಗ್ಯವಂತವಾಗಿದ್ದಾರೆ. ಸ್ವಲ್ಪ ಮಟ್ಟಿನ ಗಾಯಗಳಾಗಿವೆ. ಹೆದರುವಂಥ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್, ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚೇತರಿಸಿಕೊಳ್ಳುತ್ತಿದ್ದಾರೆ. ಪೇನ್ ಕಿಲ್ಲರ್ ಇಂಜೆಕ್ಷನ್ ನೀಡಲಾಗಿದೆ. ಹೆಬ್ಬಾಳ್ಕರ್ ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ. ಎಲ್ಒನ್ ಮೂಳೆ ಮುರಿತವಾಗಿದೆ ಎಂದು ಡಾ. ರವಿ ಅವರು ತಿಳಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ವೇಳೆ ಕುಟುಂಬದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಣ್ಣಪುಟ್ಟ ಗಾಯಗಳಾಗಿವೆ. ಆತಂಕಪಡುವ ಅವಶ್ಯಕತೆ ಇಲ್ಲ. ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯದಲ್ಲಿಯೇ ಮನೆಗೆ ತೆರಳುತ್ತೇನೆ ಎಂದು ಹೇಳಿದ್ದಾರೆ.