SUDDIKSHANA KANNADA NEWS/ DAVANAGERE/ DATE:02-12-2023
ದಾವಣಗೆರೆ: 2024ರ ಲೋಕಸಭೆ ಚುನಾವಣೆಗೆ ದಾವಣಗೆರೆ ಬಿಜೆಪಿ ಅಭ್ಯರ್ಥಿ ವಿಚಾರ ಕುರಿತಂತೆ ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅಭಿಪ್ರಾಯ ವ್ಯಕ್ತಪಡಿಸುತ್ತಲೇ ಬರುತ್ತಿದ್ದಾರೆ. ಈ ಹಿಂದೆ ನಾನೂ ಸಹ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ. ದಾವಣಗೆರೆಯಿಂದ ಸ್ಪರ್ಧಿಸಲು ಟಿಕೆಟ್ ನೀಡಿದರೆ ಕಣಕ್ಕಿಳಿಯುವೆ ಎಂದಿದ್ದ ರೇಣುಕಾಚಾರ್ಯ ಈಗ ಹೊಸ ಫಾರ್ಮುಲಾ ಮುಂದಿಟ್ಟಿದ್ದಾರೆ.
ದಾವಣಗೆರೆ ಅಭ್ಯರ್ಥಿ ಯಾರಾಗಬೇಕು ಎಂಬ ಕುರಿತಂತೆ ಪಕ್ಷದ ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರು ಸರ್ವೇ ಮಾಡಿಸಲಿ. ಯಾರಿಗೆ ಜನಾಭಿಪ್ರಾಯ ಬರುತ್ತದೆಯೋ ಅವರಿಗೆ ಟಿಕೆಟ್ ನೀಡಲಿ. ಆಗ ಯಾರಿಗೆ ಜಿಲ್ಲೆಯ ಜನರು ಮಣೆ ಹಾಕುತ್ತಾರೆ ಎಂಬುದು ಗೊತ್ತಾಗುತ್ತದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು, ವರಿಷ್ಠರು ಸರ್ವೇಗೆ ಮುಂದಾದರೆ ಯಾರಿಗೆ ಜನಪ್ರಿಯತೆ ಸಿಗುತ್ತೆ ಎಂಬುದು ಗೊತ್ತಾಗುತ್ತದೆ ಎಂದು ಹೇಳುವ ಮೂಲಕ ಮತ್ತೊಮ್ಮ ಪರೋಕ್ಷವಾಗಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಪದೇ ಪದೇ ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಎಂದು ಹೇಳಿದರೆ ನನ್ನ ವರ್ಚಸ್ಸೇ ಕುಗ್ಗತ್ತದೆ. ಈ ಕಾರಣಕ್ಕಾಗಿಯೇ ಪಕ್ಷದ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸ ನನ್ನದು. ಜನಪ್ರಿಯತೆ, ಜನಾಭಿಪ್ರಾಯದ ಮೇಲೆ ಟಿಕೆಟ್ ನೀಡಲಿ ಎಂದು ಹೇಳಿದರು.
ರಾಜ್ಯ ಸರ್ಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಶೇಕಡಾ 33ರಷ್ಟು ಮಹಿಳೆಯರಿಗೆ ಹಣ ಬಂದಿಲ್ಲ. ಗೃಹಜ್ಯೋತಿ ಯೋಜನೆಯಡಿ ಒಂದು ಕಡೆ ಕೊಟ್ಟು ಮತ್ತೊಂದು ಕಡೆ ಹೊಡೆತ ಮಾಡ್ತಿದ್ದಾರೆ. ಯುನಿಟ್ ದರ ಹೆಚ್ಚಿಸಿದ್ದಾರೆ. ರಾಜ್ಯ, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ದಿನಗಳು ಮಾತ್ರ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರು ಓಡಾಟ ಮಾಡಿದ್ದಾರೆ. ಕೆಲವೆಡೆ ಮಾತ್ರ ಮಹಿಳೆಯರು ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚರಿಸಿದರು. ಬಸ್ ಫುಲ್ ಆದ ಮೇಲೆ ವಿದ್ಯಾರ್ಥಿನಿಯರಿಗೆ ಅವಕಾಶ ಇಲ್ಲ. ಗ್ರಾಮೀಣ ಪ್ರದೇಶದಲ್ಲಿ ಸಾರಿಗೆ ಬಸ್ ಸಂಚಾರ ಇಲ್ಲ ಎಂಬುದಾಗಿ ಮಹಿಳೆಯರೇ ಹೇಳುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ಕೊಡ್ತೇವೆ ಎಂದಿದ್ದರು. ಕೇವಲ 174 ರೂಪಾಯಿ ನೀಡಲಾಗುತ್ತಿದೆ. 5 ಕೆಜಿ ಅಕ್ಕಿ ಹಣ ನೀಡ್ತಿದ್ದಾರೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದೆ. ಚುನಾವಣೆಗೆ ಮುನ್ನ ಘೋಷಣೆ ಮಾಡಿದಂತೆ ಜನರಿಗೆ ಯೋಜನೆಗಳನ್ನು ನೀಡಲಿ ಎಂದು ಆಗ್ರಹಿಸಿದರು.
ಬಿಜೆಪಿ ಸರ್ಕಾರ ಕೊಟ್ಟ ಯೋಜನೆಗಳನ್ನು ಕಾಂಗ್ರೆಸ್ ನಿಂದ ಕೊಡಲು ಆಗುತ್ತಿಲ್ಲ. ಯೋಜನೆಗಳ ವಿರುದ್ಧ ನಾವಿಲ್ಲ. ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆ ಸಮರ್ಪಕ ಅನುಷ್ಠಾನ ಆಗಿಲ್ಲ. ಯುವನಿಧಿ ಘೋಷಣೆಗಷ್ಟೇ ಸೀಮಿತವಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಿಸುವ ಭರವಸೆ ಭರವಸೆಯಾಗಿಯೇ ಉಳಿದಿದೆ. ಎನ್ ಪಿಎಸ್ ಬಗ್ಗೆ ಚಕಾರ ಎತ್ತಿಲ್ಲ. ಪ್ರಣಾಳಿಕೆಯಲ್ಲಿ ಘೋಷಿಸಿದ ಯಾವುದೇ ಯೋಜನೆ ಜಾರಿಗೊಳಿಸುತ್ತಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.
ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರ ಆರು ಸಾವಿರ ರೂಪಾಯಿಯನ್ನು ರೈತರಿಗೆ ನೀಡುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯ ಸರ್ಕಾರ ನಾಲ್ಕು ಸಾವಿರ ರೂಪಾಯಿ ನೀಡುತಿತ್ತು. ಆದ್ರೆ ಈಗ ನಾಲ್ಕು ಸಾವಿರ ರೂ. ನಿಲ್ಲಿಸಿದೆ. ಇದನ್ನು ಕೂಡಲೇ ಜಾರಿಗೊಳಿಸಬೇಕು. ಬಡವರು, ರೈತರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಮದ್ಯ, ವಿದ್ಯುತ್ ಯುನಿಟ್ ದರ ಜಾಸ್ತಿ ಮಾಡಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡುತ್ತಿಲ್ಲ. ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಬರ ಪರಿಹಾರ ಕೇಂದ್ರ ಸರ್ಕಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ತೋರಿಸುತ್ತಿದ್ದಾರೆ. ಬೆಳೆ ನಷ್ಟಕ್ಕೆ ಪ್ರತಿ ರೈತರಿಗೆ 2 ಸಾವಿರ ರೂಪಾಯಿ ನೀಡುತ್ತಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಲಿಲ್ಲ. ತೋಟಗಾರಿಕೆ ಬೆಳೆಗಳಿಗೆ ನಮ್ಮ ಅವಧಿಯಲ್ಲಿ ಒಟ್ಟು 23 ಸಾವಿರ ರೂ. ಪರಿಹಾರ ಕೊಟ್ಟಿದ್ದೇವೆ. ಅತಿವೃಷ್ಟಿ, ಅನಾವೃಷ್ಟಿ, ಕೊರೊನಾ ಸಂಕಷ್ಟದ ವೇಳೆಯಲ್ಲಿಯೂ ಜನರ ಹಿತ ಕಾಪಾಡುವ ಕೆಲಸ ಬಿಜೆಪಿ ಸರ್ಕಾರ ಮಾಡಿತ್ತು. ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಗೆ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ನಾವು ಭರವಸೆಗಳ ಸ್ವಾಗತ ಮಾಡಿದ್ದೆವು. ಆದ್ರೆ. ಎಲ್ಲಾ ಯೋಜನೆಗಳು ವಿಫಲ ಆಗಿವೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಆಗಿದೆ ಎಂದು ಆರೋಪಿಸಿದರು.